ಸಿದ್ದರಾಮಯ್ಯ ಮು.ಮಂ ಎಂದು ಕೆ.ಸಿ.ವೇಣುಗೋಪಾಲ್ ಅಧಿಕೃತ ಘೋಷಣೆ

ತುಮಕೂರು: ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಸಿದ್ದರಾಮಯ್ಯ ಹಾಗೂ ಏಕೈಕ ಉಪ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಗುರುವಾರ ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣು ಗೋಪಾಲ್ ತಿಳಿಸಿದರು.

ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೇ 20ರಂದು (ಶನಿವಾರ) ಮಧ್ಯಾಹ್ನ 12:30ಕ್ಕೆ ನೂತನ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಜೊತೆಗೆ ಕೆಲವು ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆ ವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರೇ ಮುಂದುವರಿಯಲಿದ್ದಾರೆ ಎಂದು ತಿಳಿಸಿದರು.

ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಸಿದ್ದರಾಮಯ್ಯ, ಈ ಹಿಂದೆ 2014ರಿಂದ 2018ರ ತನಕ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಬಳಿಕ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದರು.

ಡಿ. ದೇವರಾಜ ಅರಸು ನಂತರ ಮುಖ್ಯಮಂತ್ರಿಯಾಗಿ 5 ವರ್ಷ ಅವಧಿ ಪೂರ್ಣಗೊಳಿಸಿದ ಏಕೈಕ ಮುಖ್ಯಮಂತ್ರಿ ಇವರಾಗಿದ್ದಾರೆ. ಮುಖ್ಯಮಂತ್ರಿಯಾದ ನಂತರ ಬಿಪಿಎಲ್ ಕುಟುಂಬಗಳಿಗೆ ಉಚಿತ ಅಕ್ಕಿ ನೀಡುವ ‘ಅನ್ನಭಾಗ್ಯ’ ಸೇರಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದರು

ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದು, ಕನಕಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ.

2013ರಲ್ಲಿ ಸಿದ್ದರಾಮಯ್ಯ ನವರ ಸಂಪುಟದಲ್ಲಿ ಇಂಧನ ಸಚಿವರಾಗಿದ್ದರು.

Leave a Reply

Your email address will not be published. Required fields are marked *