ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆ : ಜಿಲ್ಲೆಯಲ್ಲಿ ಶೇ.70ರಷ್ಟು ಪೂರ್ಣ

ತುಮಕೂರು : ಜಿಲ್ಲೆಯಲ್ಲಿ ನಡೆಯುತ್ತಿರುವ ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆ ಶೇ.70ರಷ್ಟು ಪೂರ್ಣಗೊಂಡಿದ್ದು, ಸಮೀಕ್ಷೆ ಪ್ರಗತಿಯನ್ನು ಸಾಧಿಸಿದ ಅಧಿಕಾರಿ-ಸಿಬ್ಬಂದಿಯ ಕಾರ್ಯವಿಧಾನದ ಬಗ್ಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಜಿ.ಎನ್. ಶ್ರೀಕಂಠಯ್ಯ ಅವರು ಪ್ರಶಂಸೆ ವ್ಯಕ್ತಪಡಿಸಿದರು.

  ಶನಿವಾರ ಜಿಲ್ಲಾಧಿಕಾರಿ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ನಡೆದ ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಮೀಕ್ಷೆಯ ಅಂಕಿ ಅಂಶಗಳನ್ನು ಅವಲೋಕಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 7,55,483 ಮನೆಗಳಿದ್ದು, ಈಗಾಗಲೇ 5,23,091 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಉಳಿದ ಮನೆಗಳ ಸಮೀಕ್ಷಾ ಕಾರ್ಯ  ಅಕ್ಟೋಬರ್ 7ರೊಳಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಸಮೀಕ್ಷೆ ವೇಳೆ ಸಣ್ಣಪುಟ್ಟ ಅಡೆತಡೆಗಳು ಎದುರಾದರೂ, ಅಧಿಕಾರಿಗಳು ಹಾಗೂ ಗಣತಿದಾರರು ಅದನ್ನು ಸಮರ್ಥವಾಗಿ ಎದುರಿಸಿ ಸಮೀಕ್ಷೆ ಪ್ರಗತಿಯತ್ತ ಸಾಗಿಸುತ್ತಿದ್ದಾರೆ. ಹಿಂದುಳಿದ ವರ್ಗದ ಜನರಿಗೆ ಸರ್ಕಾರಿ ಸೌಲಭ್ಯಗಳು ಸರಿಯಾಗಿ ತಲುಪುತ್ತಿವೆಯೇ ಎಂಬುದನ್ನು ತಿಳಿಯಲು ಈ ಸಮೀಕ್ಷಾ ಕಾರ್ಯವನ್ನು ಸರ್ಕಾರ ಕೈಗೊಂಡಿದ್ದು, ಸಮೀಕ್ಷೆಯ ಸಮಗ್ರ ದತ್ತಾಂಶ ಮುಂದಿನ 20 ರಿಂದ 30 ವರ್ಷಗಳವರೆಗೆ ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮಾರ್ಗದರ್ಶಕವಾಗಲಿದೆ. ರಾಜ್ಯ ಸರ್ಕಾರ ಕಡಿಮೆ ಅವಧಿಯಲ್ಲಿ ಇಂತಹ ಮಹತ್ವದ ಸಮೀಕ್ಷೆ ಕೈಗೊಂಡಿರುವುದು ಶ್ಲಾಘನೀಯ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಅಪರ ಜಿಲ್ಲಾಧಿಕಾರಿ ಡಾ: ಎನ್ ತಿಪ್ಪೇಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಈರಣ್ಣ ಆಶಾಪುರ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ನಗರ ವ್ಯಾಪ್ತಿಯ ಯಲ್ಲಾಪುರ, ಅಂತರಸನಹಳ್ಳಿಯಲ್ಲಿ ನಡೆಯುತ್ತಿರುವ ಸಮೀಕ್ಷಾ ಕಾರ್ಯ ಸ್ಥಳಕ್ಕೆ ಭೇಟಿ ನೀಡಿ ಸದಸ್ಯರು ಪರಿಶೀಲಿಸಿದರು.

Leave a Reply

Your email address will not be published. Required fields are marked *