ಎಸ್.ಎಸ್.ಎಲ್.ಸಿ.ಪರೀಕ್ಷೆ : ಉತ್ತಮ ಫಲಿತಾಂಶ ಸಾಧಿಸಿ

ತುಮಕೂರು : ಜಿಲ್ಲೆಯಲ್ಲಿ ಮಾರ್ಚ್ 21 ರಿಂದ ಏಪ್ರಿಲ್ 4ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು.

ನಗರದ ಎಂಪ್ರೆಸ್ ಪದವಿಪೂರ್ವ ಕಾಲೇಜಿನ ಆಡಿಟೋರಿಯಂನಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆ-1ರ ಸಂಬಂಧ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯಲ್ಲಿ ಒಟ್ಟು 129 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿದ್ದು, ಎಲ್ಲಾ ಪರೀಕ್ಷಾ ಕೇಂದ್ರದಲ್ಲಿ ಪ್ರತಿ ವಿದ್ಯಾರ್ಥಿಗೂ ವಿಶ್ವಾಸದಿಂದ ಪರೀಕ್ಷೆ ಬರೆಯುವ ವಾತಾವರಣ ಹಾಗೂ ಏಕ ರೀತಿಯಾದ ಗುಣಮಟ್ಟದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ತಿಳಿಸಿದರು.

ಪರೀಕ್ಷಾ ಕಾರ್ಯವು ಅತ್ಯಂತ ಸೂಕ್ಷ್ಮ ಕಾರ್ಯವಾಗಿದ್ದು, ಯಾವುದೇ ಸಮಯದಲ್ಲಿ ತೊಂದರೆಗಳು ಸಂಭವಿಸಿದಲ್ಲಿ ನೇರವಾಗಿ ಜಿಲ್ಲಾಧಿಕಾರಿಗಳ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬೇಕೆಂದು ತಿಳಿಸಿದರು.

  
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಪ್ರಸಕ್ತ ಶೈಕ್ಷಣಿಕ ವರ್ಷದ ಮೊದಲಿನಿಂದಲೂ ಫಲಿತಾಂಶಮುಖಿಯಾದ ಹಲವಾರು ಚಟುವಟಿಕೆಗಳನ್ನು ಶಿಕ್ಷಣ ಇಲಾಖೆಯಿಂದ ಯೋಜಿತವಾಗಿ ಅನುಷ್ಟಾನಗೊಳಿಸಲಾಗಿದೆ. ವಿದ್ಯಾರ್ಥಿ ಬದುಕಿನಲ್ಲಿ 10ನೇ ತರಗತಿ ಅತ್ಯಂತ ಪ್ರಮುಖ ಘಟ್ಟವಾಗಿದೆ. ಈ ವರ್ಷದ ಪರೀಕ್ಷಾ ಕಾರ್ಯ ಯಶಸ್ವಿಯಾಗಲಿ. ಜಿಲ್ಲೆಯ ಸಾಧನೆ ಇಡೀ ರಾಜ್ಯಕ್ಕೆ ಮಾದರಿಯಾಗಲಿ ಎಂದು ಆಶಿಸಿದರು. 


ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಹೆಚ್.ಕೆ. ಮನಮೋಹನ ಹಾಗೂ ಗಿರಿಜಾ, ಡಯಟ್ ಪ್ರಾಂಶುಪಾಲ ಕೆ.ಮಂಜುನಾಥ ಹಾಗೂ ಗಂಗಾಧರ, ಎಸ್.ಎಸ್.ಎಲ್.ಸಿ. ಪರೀಕ್ಷೆ ಜಿಲ್ಲಾ ನೋಡಲ್ ಅಧಿಕಾರಿ ಮಾಧವರೆಡ್ಡಿ, ಶಿಕ್ಷಣ ಅಧಿಕಾರಿ ಎ.ಟಿ.ರಂಗದಾಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಹಾಗೂ ಪ್ರಶ್ನೆಪತ್ರಿಕೆ ಅಭಿರಕ್ಷಕರು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು. 

Leave a Reply

Your email address will not be published. Required fields are marked *