ತುಮಕೂರು: ಜಿಲ್ಲೆಯನ್ನು ಒಳಗೊಂಡ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಗೆ ಸಂಬಂಧಿಸಿ ದಂತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕೌಶಲ್ಯಾಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರುಗಳ ಸಭೆ ನಡೆಸಿ, ಮತಯಾಚನೆ ಮಾಡಿದರು.
ನಗರದ ಆರ್.ಟಿ.ನಗರದಲ್ಲಿರುವ ಬಾಪೂಜಿ ಶಿಕ್ಷಣ ಸಂಸ್ಥೆಯ ರವೀಂದ್ರ ಕಲಾನಿಕೇತನದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಗೌರವಾಧ್ಯಕ್ಷ ಎಂ.ಬಸವಯ್ಯ,ಕಾರ್ಯದರ್ಶಿ ದೇವರಾಜಯ್ಯ, ಪ್ರೊ.ಕೆ.ವಿ. ಕೃಷ್ಣಮೂರ್ತಿ ಸೇರಿದಂತೆ ನೂರಾರು ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು,ಪದಾಧಿಕಾರಿಗಳು ಹಾಗೂ ಶಿಕ್ಷಕರನ್ನು ಭೇಟಿಯಾಗಿ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಕ್ಷೇತ್ರದ ಸಮಸ್ಯೆಗಳ ಅರಿವು ಇರುವ ಡಿ.ಟಿ.ಶ್ರೀನಿವಾಸ್ ಅವರನ್ನು ಬೆಂಬಲಿಸುವಂತೆ ಮುರುಳೀಧರ್ ಹಾಲಪ್ಪ ಮನವಿ ಮಾಡಿದರು.
ಶಿಕ್ಷಕರಾಗಿ,ಸ್ವತಹಃ ಶಿಕ್ಷಣ ಸಂಸ್ಥೆ ನಡೆಸುತ್ತಾ,ಶಿಕ್ಷಕರ ಎಲ್ಲಾ ಸಮಸ್ಯೆಗಳ ಅರಿವು ಇರುವ ಮತ್ತು ಅವುಗಳಿಗೆ ತನ್ನದೇ ರೀತಿಯಲ್ಲಿಯೇ ಪರಿಹಾರ ಒದಗಿಸಬಲ್ಲ ಚಾಕುಚಕ್ಯತೆ ಮತ್ತು ಚಾಣಾಕ್ಷತನ ಡಿ.ಟಿ.ಶ್ರೀನಿವಾಸ್ ಅವರಿಗೆ ಇದೆ.ಈಗಾಗಲೇ ಶಿಕ್ಷಕ ಹಲವಾರು ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ,ಶಿಕ್ಷಣ ಸಚಿವರೊಂದಿಗೂ ಮಾತನಾಡಿದ್ದಾರೆ.ಅಂತಹವರು ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗುವುದರಿಂದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯಲಿದೆ.ಹಾಗಾಗಿ ಡಿ.ಟಿ.ಶ್ರೀನಿವಾಸ್ ಅವರನ್ನು ಶಿಕ್ಷಕರು ಆಯ್ಕೆ ಮಾಡುವಂತೆ, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ತಮ್ಮಲ್ಲಿ ಕೆಲಸ ಮಾಡುವ ಶಿಕ್ಷಕರಿಗೆ ಮನವರಿಕೆ ಮಾಡಿಕೊಡುವಂತೆ ಮುರುಳೀಧರ ಹಾಲಪ್ಪ ಮನವಿ ಮಾಡಿದರು.
ಕರ್ನಾಟಕ ರಾಜ್ಯ ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಕಾರ್ಯದರ್ಶಿ ದೇವರಾಜಯ್ಯ ಮಾತನಾಡಿ,ಶಿಕ್ಷಣ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಜನಪ್ರತಿನಿಧಿಗಳ ನಿರ್ಲಕ್ಷದಿಂದಾಗಿ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಕೊರತೆಯನ್ನು ಎದುರಿಸುತ್ತಿವೆ.ಕಳೆದ 10 ವರ್ಷಗಳಿಂದ ಅನುದಾನಿತ ಶಾಲೆಗಳಿಗೆ ಖಾಲಿ ಹುದ್ದೆಗಳ ಭರ್ತಿಗೆ ಸರಕಾರ ಅನುಮೋಧನೆ ನೀಡಿಲ್ಲ.ಮೂಲಭೂತ ಸೌಕರ್ಯದ ಕೊರತೆಯಿಂದ ಸರಕಾರಿ ಶಾಲೆಗಳು ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿದೆ.ಇದುವರೆಗೂ ಆಗ್ನೇಯ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸಿದ್ದ ವೈ.ಎ.ನಾರಾಯಣಸ್ವಾಮಿ ಅವರು ನಮ್ಮಗಳ ಸಮಸ್ಯೆ ಬಗೆಹರಿಸುವ ಬದಲು, ಶಿಕ್ಷಕರಿಗೆ ಆಸೆ, ಆಮಿಷಗಳನ್ನು ಒಡ್ಡಿ ಗೆದ್ದು ಹೋದವರು ಮತ್ತೆ ತಿರುಗಿ ನೋಡಿಲ್ಲ.ಹಾಗಾಗಿ ಶಿಕ್ಷಕರ ಸಮಸ್ಯೆಗಳ ಅರಿವು ಇರುವ ಡಿ.ಟಿ.ಶ್ರೀನಿವಾಸ ಅವರನ್ನು ಕರ್ನಾಟಕ ರಾಜ್ಯ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಬೆಂಬಲಿಸಲಿದೆ ಎಂದರು.
ಆಗ್ನೇಯ ಶಿಕ್ಷಕರ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಮಾತನಾಡಿ,ನಾನು ಕೂಡ ಸುಮಾರು 4500 ಸಾವಿರ ವಿದ್ಯಾರ್ಥಿಗಳನ್ನು ಒಳಗೊಂಡ ಶಿಕ್ಷಣ ಸಂಸ್ಥೆಯನ್ನು ನಡೆಸುತಿದ್ದು,ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಮಸ್ಯೆಯ ಅರಿವಿದೆ.ಬೆಂಗಳೂರು ಮಹಾನಗರದಲ್ಲಿರುವ ಖಾಸಗಿ ಶಾಲೆಗಳಿಗೆ ಅನುಸರಿಸುವ ಮಾನದಂಡಗಳನ್ನೇ ತಾಲೂಕಿನ ಯಾವುದೋ ಹಳ್ಳಿಯಲ್ಲಿರುವ ಶಿಕ್ಷಣ ಸಂಸ್ಥೆಗೆ ಅನ್ವಯಿಸುವುದು ಸರಿಯಲ್ಲ.ಇದರಿಂದ ಸಾಕಷ್ಟು ತೊಂದರೆ ಅನುಭವಿಸ ಬೇಕಾಗುತ್ತಿದೆ.ಈ ಎಲ್ಲಾ ಮಾಹಿತಿಗಳ ಕುರಿತು ಈಗಾಗಲೇ ಚರ್ಚೆ ನಡೆಸಲಾಗಿದೆ.ನಿಮ್ಮಗಳಲ್ಲಿ ಒಬ್ಬನಾಗಿ ನಿಮ್ಮ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ.ಜೂನ್ 03 ರಂದು ನಡೆಯುವ ಚುನಾವಣೆಯಲ್ಲಿ ನನಗೆ ಮತ ನೀಡಿ, ನಿಮ್ಮಗಳ ಸೇವೆಗೆ ಸದಾವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.
ಸಭೆಯಲ್ಲಿ ಶ್ರೀಕೃಷ್ಣ ವಿದ್ಯಾಸಂಸ್ಥೆಯ ಮರಿಚನ್ನಯ್ಯ ಸೇರಿದಂತೆ ಹಲವಾರು ಜನರು ಭಾಗವಹಿಸಿದ್ದರು.