ತುಮಕೂರು : ಅಬ್ಬಬ್ಬಾ ಜಿಲ್ಲೆಯಲ್ಲಿ 120 ವರ್ಷ ದಾಟಿದ 3 ಜನ, 100 ವರ್ಷ ದಾಟಿದ 1039 ಹಿರಿಯ ಮತದಾರರು ಇರುವುದಾಗಿ ಭಾರತ ಚುನಾವಣಾ ಆಯೋಗದ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ತಿಳಿಸಿದರು.
ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನ ಆಗಿರುವ ನಗರ ಪ್ರದೇಶ ಹಾಗೂ ಗ್ರಾಮೀಣ ಪ್ರದೇಶಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಮತದಾನ ಕೇಂದ್ರಗಳಲ್ಲಿ ಸಾರ್ವಜನಿಕರಲ್ಲಿ ಮತದಾನ ಕುರಿತು ಅರಿವು ಮೂಡಿಸಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗುವಂತೆ ಕ್ರಮವಹಿಸಬೇಕೆಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಲೋಕಸಭಾ ಚುನಾವಣೆ-2024ರ ಸಂಬಂಧ ವಿವಿಧ ಸ್ವೀಪ್ ಚಟುವಟಿಕೆಗಳ ಕುರಿತು ಜಿಲ್ಲಾ ಮಟ್ಟದ ಸ್ವೀಪ್ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಕೇಂದ್ರ ಚುನಾವಣಾ ಆಯೋಗದ ಮಾರ್ಗಸೂಚಿಯನುಸಾರ ಕರ್ತವ್ಯ ನಿರ್ವಹಿಸಬೇಕು. ಜಿಲ್ಲೆಯ 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರ ಪಟ್ಟಿಯಲ್ಲಿ ನೋಂದಣಿಯಾಗಿರುವಂತೆ ನೋಡಿಕೊಳ್ಳಬೇಕು. ತುಮಕೂರು ಲೋಕಸಭಾ ಚುನಾವಣಾ ವ್ಯಾಪ್ತಿಗೆ 8 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಜನವರಿ 4, 2024ಕ್ಕೆ ಅನ್ವಯಿಸುವಂತೆ ಒಟ್ಟು 25,65,869 ಮತದಾರರಿದ್ದಾರೆ. 2019ರ ಲೋಕಸಭಾ ಚುನಾವಣೆಯ ಮತದಾನದ ಪ್ರಮಾಣ, ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024ರ ಅಂಕಿ ಅಂಶಗಳು, ಇಲಾಖೆಗಳ ಮೂಲಕ ಕೈಗೊಳ್ಳಬಹುದಾದ ಮತದಾರರ ಜಾಗೃತಿ ಕ್ರಮಗಳ ವಿವರ, ಮೊದಲಾದ ಮಾಹಿತಿಗಳನ್ನು ಪರಿಶೀಲಿಸಿದ ಅವರು ಜಿಲ್ಲೆಯಲ್ಲಿ ಮತದಾನ ಹೆಚ್ಚಳಕ್ಕೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು. ತುಮಕೂರು ನಗರದಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪಾಲಿಕೆ ಉಪ ಆಯುಕ್ತೆ ಸುಮತಿ ಅವರಿಗೆ ಸೂಚಿಸಿದರು.
ಜಿಲ್ಲೆಯಲ್ಲಿರುವ ಶಾಲೆಗಳು, ಪದವಿಪೂರ್ವ, ಸ್ನಾತಕ/ಸ್ನಾತಕೋತ್ತರ ಕಾಲೇಜುಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಮಾಹಿತಿ ಪಡೆದ ಅವರು, 18 ವರ್ಷ ಮೀರಿದ ಪ್ರತಿಯೊಬ್ಬ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಜಿಲ್ಲೆಯ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಜನಸಂದಣಿ ಪ್ರದೇಶದಲ್ಲಿ ಮತದಾನದ ಕುರಿತು ಅರಿವು ಮೂಡಿಸಬೇಕು. ಈ ಬಗ್ಗೆ ಸರ್ಕಾರಿ/ಖಾಸಗಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಡಿಡಿಪಿಐ ರಂಗಧಾಮಯ್ಯ ಅವರಿಗೆ ಸೂಚಿಸಿದರು.
ಜಿಲ್ಲೆಯಲ್ಲಿ 120 ವರ್ಷ ದಾಟಿದ 3 ಜನ, 100 ವರ್ಷ ದಾಟಿದ 1039 ಹಿರಿಯ ಮತದಾರರು ಇರುವ ಮಾಹಿತಿ ಹಾಗೂ ವೃದ್ಧಾಶ್ರಮಗಳ ಬಗ್ಗೆ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ರಮೇಶ್ ಅವರಿಂದ ವಿವರ ಪಡೆದ ಅವರು, ಹಿರಿಯ ನಾಗರಿಕರ ಮನೆಗಳಿಗೆ ಭೇಟಿ ನೀಡಿ ಮತದಾನದ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.