
ತುಮಕೂರು- ನಗರ ವಿಧಾನಸಭಾ ಕ್ಷೇತ್ರದಲ್ಲಿ 2ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಜ್ಯೋತಿಗಣೇಶ್ ಅವರು ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಮಹಾನಗರ ಪಾಲಿಕೆ ಆವರಣದಲ್ಲಿ ಶಾಸಕರ ಕಚೇರಿಯನ್ನು
ಮಹಾನಗರ ಪಾಲಿಕೆ ಆವರಣದಲ್ಲಿರುವ ಶಾಸಕರ ಹಳೇ ಕಚೇರಿಯನ್ನೇ ಈ ಬಾರಿಯೂ ನೂತನವಾಗಿ ವಿಶೇಷ ಪೂಜಾ ವಿಧಿ ವಿಧಾನ ನೆರವೇರಿಸುವ ಮೂಲಕ ಇಂದು ಆರಂಭಿಸಲಾಯಿತು.
ಶಾಸಕರ ಕಚೇರಿ ಪ್ರಾರಂಭೋತ್ಸವದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ, ಟೂಡಾ ಅಧ್ಯಕ್ಷ ಚಂದ್ರಶೇಖರ್, ಟೂಡಾ ಮಾಜಿ ಅಧ್ಯಕ್ಷ ಬಾವಿಕಟ್ಟೆ ನಾಗಣ್ಣ, ಪಾಲಿಕೆ ಮಾಜಿ ಮೇಯರ್ ಬಿ.ಜಿ. ಕೃಷ್ಣಪ್ಪ, ಮುಖಂಡರಾದ ವೈ.ಎಚ್. ಹುಚ್ಚಯ್ಯ, ನಂದೀಶ್, ರವೀಶಯ್ಯ, ಜಗದೀಶ್, ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ, ನಗರ ಬಿಜೆಪಿ ಅಧ್ಯಕ್ಷ ಹನುಮಂತರಾಜು ಸೇರಿದಂತೆ ಬಿಜೆಪಿ ಕಾರ್ಯಕರ್ತರುಗಳು ಪಾಲ್ಗೊಂಡು ಶಾಸಕ ಜ್ಯೋತಿಗಣೇಶ್ ಅವರಿಗೆ ಶುಭ ಹಾರೈಸಿದರು.
ಕಚೇರಿ ಪ್ರಾರಂಭೋತ್ಸವದ ಪೂಜಾ ವಿಧಾನಗಳು ನೆರವೇರಿದ ನಂತರ ಮಾತನಾಡಿದ ಶಾಸಕ ಜ್ಯೋತಿಗಣೇಶ್ ಅವರು, 16ನೇ ವಿಧಾನಸಭೆಗೆ ಮೇ 10 ರಂದು ನಡೆದ ಚುನಾವಣೆಯಲ್ಲಿ ನಗರ ಕ್ಷೇತ್ರದಲ್ಲಿ ಸಂದಿಗ್ದ, ಗೊಂದಲಮಯ ವಾತಾವರಣ ನಿರ್ಮಾಣವಾಗಿತ್ತು. ಇಂತಹ ಪರಿಸ್ಥಿತಿಯಲ್ಲೂ ತುಮಕೂರಿನ ಜನತೆ ನನ್ನನ್ನು ಕೈ ಹಿಡಿದು ಗೆಲ್ಲಿಸಿದ್ದಾರೆ. ನಗರದ ಜನರಿಗೆ ನಾನು ಚಿರಋಣಿಯಾಗಿದ್ದೇನೆ. ನಗರದ ಸಮಗ್ರ ಅಭಿವೃದ್ಧಿ, ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಲು ನಾನು ಸದಾ ಬದ್ಧನಾಗಿದ್ದೇನೆ ಎಂದರು.
ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರುಗಳು ಪ್ರಚಾರ ನಡೆಸಿ ನನ್ನ ಗೆಲುವಿಗೆ ಸಹಕರಿಸಿದ್ದಾರೆ. ಅವರೆಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದರು.
2018 ರ ಚುನಾವಣೆಯಲ್ಲೂ ನಗರ ಕ್ಷೇತ್ರದಲ್ಲಿ ಇದೇ ರೀತಿಯ ಗೊಂದಲಮಯ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಆ ಸಂದರ್ಭದಲ್ಲಿ ಬಹಿರಂಗವಾಗಿರಲಿಲ್ಲ. ಈ ಗೊಂದಲ ಪರಿಸ್ಥಿತಿ ಈ ಚುನಾವಣೆಯಲ್ಲಿ ಬಹಿರಂಗವಾಗಿದ್ದರೂ ಸ್ವಲ್ಪ ಕಷ್ಟವಾಯಿತು. ಏನೇ ಆದರೂ ನಗರದ ಜನತೆ ನನ್ನ ಕೈಹಿಡಿದಿದ್ದಾರೆ ಎಂದು ಅವರು ಹೇಳಿದರು.
ಜನರಿಗೋಸ್ಕರ ಶಾಸಕರ ಕಾರ್ಯಾಲಯವನ್ನು ಪ್ರಾರಂಭಿಸಲಾಗಿದೆ. ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಕಚೇರಿ ಸದಾ ಮುಕ್ತವಾಗಿರುತ್ತದೆ ಎಂದು ಅವರು ತಿಳಿಸಿದರು.