ಜಿಲ್ಲಾ ಆಸ್ಪತ್ರೆಯ ತಾಯಿ ಮಕ್ಕಳ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲಾಗುತ್ತಿದೆ-ಗೃಹ ಸಚಿವ ಡಾ:ಜಿ.ಪರಮೇಶ್ವರ್

ತುಮಕೂರು : ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 99ಕೋಟಿ ರೂ. ಅಂದಾಜು ವೆಚ್ಚದಲ್ಲಿ 100 ಹಾಸಿಗೆಗಳ್ಳುಳ್ಳ ಕ್ಯಾನ್ಸರ್ ಆಸ್ಪತ್ರೆಯ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿರುತ್ತದೆ. 20 ಕೋಟಿ ರೂ. ವೆಚ್ಚದಲ್ಲಿ 100 ಹಾಸಿಗೆಗಳ್ಳುಳ್ಳತಾಯಿ-ಮಕ್ಕಳ ಆಸ್ಪತ್ರೆ'' ಹಾಗೂ 50 ಲಕ್ಷ ರೂ. ವೆಚ್ಚದಲ್ಲಿ 10 ಹಾಸಿಗೆಗಳ್ಳುಳ್ಳಪೌಷ್ಠಿಕ ಪುನಃಶ್ಚೇತನ” ಕೇಂದ್ರಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿದೆ. 100 ಹಾಸಿಗೆಗಳುಳ್ಳ ತಾಯಿ ಮಕ್ಕಳ ಆಸ್ಪತ್ರೆಯನ್ನು 200 ಹಾಸಿಗೆಗಳುಳ್ಳ ತಾಯಿ ಮಕ್ಕಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಜಿ.ಪರಮೇಶ್ವರ್ ಅವರು ತಿಳಿಸಿದರು.

ಜಿಲ್ಲಾಡಳಿತ ವತಿಯಿಂದ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿಂದು 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ರಾಜ್ಯ ರಾಜಧಾನಿ ಬೆಂಗಳೂರಿಗೆ ಹೆಬ್ಬಾಗಿಲಿನಂತಿರುವ ತುಮಕೂರು ಭೌಗೋಳಿಕವಾಗಿ, ಸಾಂಸ್ಕøತಿಕವಾಗಿ, ಸಾಹಿತ್ಯಿಕವಾಗಿ, ಧಾರ್ಮಿಕವಾಗಿ ಹಾಗೂ ಶೈಕ್ಷಣಿಕವಾಗಿ ಅನೇಕ ಮಹತ್ವಗಳನ್ನು ಒಳಗೊಂಡಿರುವ ವಿಶಾಲವಾದ ಜಿಲ್ಲೆಯಾಗಿದೆ. ಮಧುಗಿರಿಯ ಏಕಶಿಲಾ ಬೆಟ್ಟ, ಕೈದಾಳ, ಶಿರಾ, ಮುಂತಾದ ಪ್ರಾಂತ್ಯಗಳು ಜಿಲ್ಲೆಯ ಚಾರಿತ್ರಿಕ ಮಹತ್ವವನ್ನು ಸಾರುತ್ತಿವೆ ಎಂದರು.

ಕನ್ನಡ ನಾಡು ನುಡಿಯ ಏಳ್ಗೆಗಾಗಿ ರಾಜ್ಯ ಸರ್ಕಾರ ಕಂಕಣಬದ್ಧವಾಗಿದೆ. ಕನ್ನಡ ನಾಡಿನ ಜನತೆಯ ಸರ್ವತೋಮುಖ ಅಭಿವೃದ್ಧಿಗಾಗಿ ಸರ್ಕಾರ ಕೆಲಸ ಮಾಡುತ್ತಿದೆ. ಮೈಸೂರು ರಾಜ್ಯಕ್ಕೆ ಕರ್ನಾಟಕವೆಂದು ಮರು ನಾಮಕರಣವಾಗಿ 1ನೇ ನವೆಂಬರ್ 2023ಕ್ಕೆ 50 ವರ್ಷ ಪೂರ್ಣಗೊಳ್ಳಲಿದ್ದು, ‘ಕರ್ನಾಟಕ ಸಂಭ್ರಮ-50’ ಘೋಷಣೆಯಡಿ ಕರ್ನಾಟಕದ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕøತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಇಡೀ ವರ್ಷ ಹಮ್ಮಿಕೊಳ್ಳಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಜಿ.ಪರಮೇಶ್ವರ್ ಅವರು ತಿಳಿಸಿದರು.

 ರಾಜ್ಯದ ಪ್ರತಿಯೊಬ್ಬ ನಾಗರಿಕರೂ ಕೂಡ ಕನ್ನಡದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು. ಕರ್ನಾಟಕ ಮಾತ್ರವಲ್ಲದೆ ದೇಶ ವಿದೇಶಗಳಲ್ಲೂ ಸಹ ಕನ್ನಡವನ್ನು ಪಸರಿಸುವಂತೆ ನಾವೆಲ್ಲರೂ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು. 

ಸರ್ಕಾರದ ಆದೇಶದಂತೆ ತುಮಕೂರು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಸೆಪ್ಟೆಂಬರ್ 25ರಂದು ತುಮಕೂರು ನಗರದ ಅಮಾನಿಕೆರೆ ಪಾರ್ಕ್ ಆವರಣದಲ್ಲಿ ಮಾಡಲಾಗಿದ್ದು, ಅಕ್ಟೋಬರ್ 9, 2023ರಂದು ಕುಣಿಗಲ್ ತಾಲ್ಲೂಕಿನಲ್ಲಿ ತಾಲ್ಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ನಡೆಸಲಾಗಿರುತ್ತದೆ. ಜನರ ಸಮಸ್ಯೆಗಳಿಗೆ ನೇರವಾಗಿ ಪರಿಹಾರ ನೀಡಲು ಸರ್ಕಾರ ಕಂಕಣಬದ್ದವಾಗಿದ್ದು, ಈ ಕಾರ್ಯಕ್ರಮಗಳಿಂದ ಜನರಿಗೆ ಅನುಕೂಲವಾಗಿರುತ್ತದೆ ಎಂದರು.

  ವಸತಿ ರಹಿತರಿಗೆ ಆಶ್ರಯ ಯೋಜನೆಯಡಿ ನಿವೇಶನ ವಿತರಿಸುವ ಸಂಬಂಧ ಲಭ್ಯವಿರುವ ಸರ್ಕಾರಿ ಜಮೀನುಗಳಲ್ಲಿ 2122.33 ಎಕರೆ ಗುರ್ತಿಸಿ ಮಂಜೂರಾತಿಗೆ ಕ್ರಮವಹಿಸಲಾಗಿದೆ. ಇದೇ ರೀತಿ ಗ್ರಾಮ ಪಂಚಾಯತಿಗಳಲ್ಲಿ ಉದ್ಯಾನವನಕ್ಕೆ 233-11 ಎ/ಗು ಗುರುತಿಸಲಾಗಿದೆ ಹಾಗೂ ಸರ್ಕಾರಿ ಶಾಲೆಗಳಿಗೆ ಆಟದ ಮೈದಾನಕ್ಕೆ ಅವಶ್ಯವಿರುವ 539-03 ಎ/ಗು ಸರ್ಕಾರಿ ಜಮೀನುಗಳನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ.

ಜೆಜೆಎಂ ಯೋಜನೆಯಡಿ ತುಮಕೂರು ಜಿಲ್ಲೆಯಲ್ಲಿ 10 ತಾಲ್ಲೂಕುಗಳು, 330 ಗ್ರಾಮ ಪಂಚಾಯಿತಿಗಳ ಎಲ್ಲಾ ಜನವಸತಿಗಳಲ್ಲಿ ಕುಟುಂಬಗಳಿಗೆ ಬಹುಗ್ರಾಮ ಯೋಜನೆ ಹಾಗೂ ಏಕಗ್ರಾಮ ಯೋಜನೆಯಡಿ ಜಲಮೂಲಗಳನ್ನು ಆಧರಿಸಿ ಮನೆ-ಮನೆಗೆ ಗಂಗೆ ಎಂಬ ಘೋಷವಾಕ್ಯದೊಂದಿಗೆ ಜಿಲ್ಲೆಯಲ್ಲಿ ಒಟ್ಟು 3699 ಕಾಮಗಾರಿಗಳನ್ನು ರೂ. 2205,70 ಕೋಟಿ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಯೋಜನೆಯಡಿ ಒಟ್ಟು 292 ಕಾಮಗಾರಿಗಳು ಪೂರ್ಣಗೊಂಡಿದ್ದು, 865 ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರಸಕ್ತ ವರ್ಷದಲ್ಲಿ 2542 ಕಾಮಗಾರಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕರುಗಳಾದ ಜಿ.ಬಿ.ಜ್ಯೋತಿಗಣೇಶ್, ಸುರೇಶ್‍ಗೌಡ, ಪಾಲಿಕೆ ಮೇಯರ್ ಪ್ರಭಾವತಿ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಸಿಇಓ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಮಹಾನಗರ ಪಾಲಿಕೆ ಆಯುಕ್ತೆ ಅಶ್ವಿಜ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ಧಲಿಂಗಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *