ತುಮಕೂರು : ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯ ಅನುದಾನವನ್ನು ಕೇವಲ ಪರಿಶಿಷ್ಟ ಜಾತಿ, ಪಂಗಡ ಸಮುದಾಯಗಳ ಕಲ್ಯಾಣಕ್ಕಾಗಿ ಮಾತ್ರ ಬಳಸಬೇಕು. ಆದರೆ, ಕಾಂಗ್ರೆಸ್ ಸರ್ಕಾರ ಎಸ್ಸಿಪಿ, ಟಿಎಸ್ಪಿ ಯೋಜನೆಯ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ಈ ವರ್ಗಗಳಿಗೆ ಅನ್ಯಾಯ ಮಾಡಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಟೀಕಿಸಿದರು.
ತುಮಕೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಆರ್ಥಿಕ ತಜ್ಞ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿಗಳು ಈ ಹಿಂದೆ ಎಸ್ಸಿ, ಎಸ್ಟಿ ಸಮುದಾಯಗಳ ಯೋಜನೆಗೆ ಮೀಸಲಿಟ್ಟ ಅನುದಾನವನ್ನು ಸಂಪೂರ್ಣವಾಗಿ ಬಿಡುಗಡೆ ಮಾಡದೆ ಸಮುದಾಯಕ್ಕೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರಕ್ಕೆ ಬಡವರು, ದಲಿತರ ಬಗ್ಗೆ ಕಾಳಜಿ ಇಲ್ಲ, ಬದಲಾಗಿ ನಿಷ್ಕಾಳಜಿ ಹೊಂದಿದೆ. ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದಾಗಿನಿಂದ ಸಮುದಾಯದ ಅಭಿವೃದ್ಧಿಗೆ ಒತ್ತು ಕೊಟ್ಟಿಲ್ಲ. ಗ್ಯಾರಂಟಿಗಾಗಿ ದಲಿತ ಸಮುದಾಯದ ಹಣವನ್ನು ಬಳಕೆ ಮಾಡಿಕೊಳ್ಳುವ ಮೂಲಕ ಈ ವರ್ಗಗಳಿಗೆ ಅನ್ಯಾಯ ಮಾಡಿದ್ದಾರೆ ಎಂದು ಕಿಡಿಕಾರಿದರು.
ದಲಿತರ ನಿಗಮಗಳಿಗೆ ಬಜೆಟ್‌ನಲ್ಲಿ ಅನುದಾನ ಕಡಿಮೆ ಕೊಟ್ಟಿದ್ದಾರೆ. ಆದರೆ, ಅಲ್ಪಸಂಖ್ಯಾತ ನಿಗಮಗಳಿಗೆ ಹೆಚ್ಚು ಅನುದಾನ ಕೊಡುತ್ತಾ ಬಂದಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ಕೊಡುತ್ತೇವೆ ಎಂದು ಹೇಳಿದ್ದರು. ಆದರೆ ಬಿಡುಗಡೆ ಮಾಡಿದ್ದು ಮಾತ್ರ 25 ಕೋಟಿ. ಬಂಜಾರ ನಿಗಮಕ್ಕೆ 35 ಕೋಟಿ ಅನುದಾನ ಕೊಡುತ್ತೇನೆ ಎಂದು ಭರವಸೆ ನೀಡಿದ್ದರು, ಆದರೆ 85 ಕೋಟಿ ಕೊಟ್ಟಿದ್ದಾರೆ ಅಷ್ಟೇ. ಹೀಗೆ ಅನುದಾನ ಕೊಡುತ್ತೇವೆ ಎಂದ ಹಣವನ್ನು ಸಹ ಸಮರ್ಪಕವಾಗಿ ಬಿಡುಗಡೆ ಮಾಡಿಲ್ಲ. ಈ ಎಲ್ಲ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆಪಾದಿಸಿದರು.
ಕೋಲಾರ ಮಾಜಿ ಸಂಸದ ಮುನಿಸ್ವಾಮಿ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಕೆಲ ನಾಯಕರು ಮುಖ್ಯಮಂತ್ರಿ ಕುರ್ಚಿಗಾಗಿ ಹೊಸ ಬಟ್ಟೆ ಒಲಿಸಿಕೊಂಡು ದೇವಾಲಯಗಳಲ್ಲಿ ಪೂಜೆ ಮಾಡಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಅವರು ಕಾಲು ಮುರಿದುಕೊಳ್ಳುವಂತೆ ಮಾಡಿದ್ದಾರೆ. ನಾವು ಸಿಎಂ ಆಗಬೇಕು ಎಂದು ಸತೀಶ್ ಜಾರಕಿಹೊಳಿ, ಡಿ.ಕೆ. ಶಿವಕುಮಾರ್ ಓಡಾಡುತ್ತಿದ್ದಾರೆ ಎಂದು ದೂರಿದರು.
ಈ ಸಂದರ್ಭದಲ್ಲಿ ಶಾಸಕ ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ, ಬ್ಯಾಟರಂಗೇಗೌಡ, ಅಂಬಿಕಾ ಹುಲಿನಾಯ್ಕರ್, ವೈ.ಹೆಚ್.ಹುಚ್ಚಯ್ಯ, ದಿಲೀಪ್‌ಕುಮಾರ್, ಡಾ. ನರೇಂದ್ರ ರಂಗಪ್ಪ, ಆಂಜಿನಪ್ಪ, ಗಂಗರಾಜು, ವೆಂಕಟೇಶ್, ಲೋಹಿತ್, ಜಗದೀಶ್ ಇದ್ದರು.

ಪತ್ರಿಕಾಗೋಷ್ಠಿ ನಂತರ ಬಿಜೆಪಿ ಪಕ್ಷದ ವತಿಯಿಂದ ರಾಜ್ಯ ಸರ್ಕಾರ ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಮೋಸ, ದಲಿತರ ಹಣಕ್ಕೆ ಕನ್ನ ಹಾಕುತ್ತಿದೆ ಎಂದು ಆರೋಪಿಸಿ ಬೃಹತ್ ಜನಾಂದೋಲನ ನಡೆಸಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ರವರಿಗೆ ಮನವಿ ಸಲ್ಲಿಸಲಾಯಿತು. ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್, ಮಾಜಿ ಸಂಸದ ಮುನಿಸ್ವಾಮಿ, ಶಾಸಕ ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರುಗಳು ಭಾಗವಹಿಸಿದ್ದರು.