ತುಮಕೂರು : ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತಾಧಿಕಾರಿ(ವಿ.ಎ.)ಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರಕಟವಾಗಿರುವ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಪರಿಷ್ಕøತ ಆಯ್ಕೆ ಪಟ್ಟಿಯನ್ವಯ 1:3 ಅನುಪಾತದಲ್ಲಿ ಜನವರಿ 6ರಂದು ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯ ಬಹು ಉಪಯೋಗಿ ಸಭಾಂಗಣದಲ್ಲಿ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನಾ ಕಾರ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಶನಿವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು, ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ ಈಗಾಗಲೇ ತಾತ್ಕಾಲಿಕ ಪರಿಷ್ಕøತ ಆಯ್ಕೆ ಪಟ್ಟಿಯನ್ನು ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ದಾಖಲಾತಿ ಪರಿಶೀಲನೆಗೆ ಹಾಜರಾಗುವಂತೆ ಅಭ್ಯರ್ಥಿಗಳಿಗೆ ಸೂಚನಾ ಪತ್ರಗಳನ್ನು ಕಳುಹಿಸಲಾಗಿದೆ. ದಾಖಲಾತಿ ಪರಿಶೀಲನಾ ಕಾರ್ಯವು ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾಗಲಿದೆ. ದಾಖಲಾತಿಗಳ ಪರಿಶೀಲನೆಗಾಗಿ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನೊಳಗೊಂಡ 7 ತಂಡಗಳನ್ನು ರಚಿಸಲಾಗಿದೆ. ಸಾಮಾನ್ಯ ಅಭ್ಯರ್ಥಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಂಗವಿಕಲ ಅಭ್ಯರ್ಥಿಗಳ ಮೂಲ ದಾಖಲಾತಿಗಳನ್ನು ಅಧಿಕಾರಿಗಳ ತಂಡ ಪ್ರತ್ಯೇಕವಾಗಿ ಪರಿಶೀಲಿಸಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್.ತಿಪ್ಪೇಸ್ವಾಮಿ, ಗುಬ್ಬಿ ತಹಶೀಲ್ದಾರ್ ಆರತಿ, ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಮೋಹನ್ ಕುಮಾರ್, ಶಿರಸ್ತೆದಾರ ಲೋಕೇಶ್ ಮತ್ತಿತರರು ಹಾಜರಿದ್ದರು.