ಮತದಾರರು ನೈತಿಕ ಮತದಾನದ ದೃಢಸಂಕಲ್ಪ ಹೊಂದಬೇಕು -ನೂರುನ್ನೀಸ ಕರೆ

ತುಮಕೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಮತದಾರರೂ ನೈತಿಕ ಮತದಾನದ ದೃಢಸಂಕಲ್ಪ ಹೊಂದಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಕರೆ ನೀಡಿದರು.

ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಶನಿವಾರ ಹಮ್ಮಿಕೊಂಡಿದ್ದ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಯುವಜನತೆ ದೇಶದ ಸುವ್ಯವಸ್ಥೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯನ್ನು ಹೊಂದಬೇಕು. ಚುನಾವಣೆಯಲ್ಲಿ ನ್ಯಾಯಸಮ್ಮತವಾಗಿ, ಪ್ರಾಮಾಣಿಕವಾಗಿ ಮತ ಚಲಾಯಿಸುವ ಮೂಲಕ ದೇಶದ ಭದ್ರತೆಗೆ ಕಾರಣಕರ್ತರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಯಾವುದೇ ರಾಷ್ಟ್ರವನ್ನು ಮುನ್ನಡೆಸಲು ಪ್ರತಿಯೊಬ್ಬ ಪ್ರಜೆಯೂ ಮತದಾನದ ಹಕ್ಕು ಹೊಂದುವುದು ಅತ್ಯಾವಶ್ಯವೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ಭಾರತದಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬರಿಗೂ ಮತದಾನದ ಹಕ್ಕನ್ನು ನೀಡಲಾಗಿದೆ. ರಾಷ್ಟ್ರವನ್ನು ಮುನ್ನಡೆಸಿ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಉತ್ತಮ ನಾಯಕನನ್ನು ಆಯ್ಕೆ ಮಾಡುವ ಹಕ್ಕನ್ನು ಈ ಮತದಾನ ನೀಡುತ್ತದೆ. ಸಾರ್ವತ್ರಿಕ ಚುನಾವಣೆಗಳಲ್ಲಿ ಮತದಾರರು ಮತದಾನ ಮಾಡುವ ಮೂಲಕ ಉತ್ತಮ ನಾಯಕನನ್ನು ಆರಿಸಿ ದೇಶದ ಉಜ್ವಲ ಭವಿಷ್ಯಕ್ಕೆ ಕಾರಣರಾಗಬೇಕೆಂದು ಕರೆ ನೀಡಿದರು.

 ಸಂವಿಧಾನಾತ್ಮಕವಾಗಿ 18 ವರ್ಷ ತುಂಬಿದ ದೇಶದ ಎಲ್ಲ ಪ್ರಜೆಗಳು ಮತದಾನದ ಗುರುತಿನ ಚೀಟಿ(ಎಪಿಕ್ ಕಾರ್ಡ್) ಹೊಂದುವುದು ಕಡ್ಡಾಯ.  ಎಪಿಕ್ ಕಾರ್ಡ್ ಇಲ್ಲದೆ ಭವಿಷ್ಯದಲ್ಲಿ   ಸೌಲಭ್ಯಗಳು ಕೈತಪ್ಪಿ ಹೋಗುವ ಸಾಧ್ಯತೆಯಿರುತ್ತದೆ.  ವಿದೇಶಿ ವ್ಯಾಸಂಗ, ಚುನಾವಣೆಯಲ್ಲಿ ಸ್ಪರ್ಧಿಸಲು ಸೇರಿದಂತೆ ಮತ್ತಿತರ ಸೌಲಭ್ಯಗಳಿಗೆ ಎಪಿಕ್ ಕಾರ್ಡ್ ಬೇಕೇ ಬೇಕು.  ಈ ನಿಟ್ಟಿನಲ್ಲಿ  18 ವರ್ಷ ತುಂಬಿದವರೆಲ್ಲರೂ ಕೂಡಲೇ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.


ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು ಮಾತನಾಡಿ ಸಾರ್ವತ್ರಿಕ ಚುನಾವಣಾ ಮತದಾನದಲ್ಲಿ ಪ್ರತಿಯೊಬ್ಬರೂ ಭಾಗವಹಿಸುವಂತೆ ಉತ್ತೇಜಿಸುವ ಸಲುವಾಗಿ ಪ್ರತೀ ವರ್ಷ ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ದೇಶದಾದ್ಯಂತ ಆಚರಿಸಲಾಗುವುದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲ ಮತದಾನದ ಮೌಲ್ಯವನ್ನು ಅರಿಯಬೇಕು. ಒಂದೊಂದು ಮತವೂ ದೇಶದ ಭವಿಷ್ಯದ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಸ್ವಾಗತಿಸಿದರು.

ಇದಕ್ಕೂ ಮುನ್ನ ನಗರದ ಬಿ.ಜಿ.ಎಸ್. ವೃತ್ತದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಲಾಗಿತ್ತು.  ನಂತರ ಬಿಜಿಎಸ್ ವೃತ್ತದಿಂದ ಗುಬ್ಬಿ ವೀರಣ್ಣ ಕಲಾಕ್ಷೇತ್ರದವರೆಗೆ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚುನಾವಣಾ ಪ್ರತಿಜ್ಞಾ ವಿಧಿಯನ್ನು ಬೋಧಿಸುವ ಮೂಲಕ ಅಪರ ಜಿಲ್ಲಾಧಿಕಾರಿ   ಡಾ: ಎನ್ ತಿಪ್ಪೇಸ್ವಾಮಿ  ಚಾಲನೆ ನೀಡಿದರು.   


ಕಳೆದ ಲೋಕಸಭಾ ಚುನಾವಣೆಯಲ್ಲಿ ಶೇ.3ರಷ್ಟು ಮತದಾನ ಹೆಚ್ಚಳಕ್ಕೆ ಶ್ರಮಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್,  ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು ಹಾಗೂ ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಶಾಂತಿಯುತ ಮತದಾನಕ್ಕೆ ಕಾರಣರಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಅವರನ್ನು ಗೌರವಿಸಲಾಯಿತು. 

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮನಮೋಹನ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ರಂಗಸ್ವಾಮಿ, ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮತ್ತಿತರೆ ಅಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು. 

Leave a Reply

Your email address will not be published. Required fields are marked *