ತುಮಕೂರು : ಮಹರ್ಷಿ ವಾಲ್ಮೀಕಿಯಂತೆ ಸಮಾಜದ ಒಳಿತಿಗಾಗಿ ನಮ್ಮಲ್ಲಿ ಸಕರಾತ್ಮಕ ಬದಲಾವಣೆ ತಂದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಹಮ್ಮಿಕೊಂಡಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕ ವಿಧಾನ ಪರಿಷತ್ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಸರಳವಾಗಿ ಆಯೋಜಿಸಲಾಗಿದೆ .ಮಹರ್ಷಿ ವಾಲ್ಮೀಕಿ ಜಯಂತಿ ಕೇವಲ ಆಚರಣೆಗೆ ಸೀಮಿತವಾಗದೆ, ಅವರ ಜೀವನದ ಆದರ್ಶಗಳನ್ನು ಅರಿತುಕೊಳ್ಳುವ ದಿನವಾಗಿದೆ. ಸಾಮಾನ್ಯ ವ್ಯಕ್ತಿಯಾಗಿದ್ದ ರತ್ನಾಕರರು ಸಕರಾತ್ಮಕವಾಗಿ ಬದಲಾವಣೆ ಮಾಡಿಕೊಂಡು ಮಹರ್ಷಿ ವಾಲ್ಮೀಕಿಯಾಗಿ ರೂಪುಗೊಂಡಿರುವುದು ಎಲ್ಲರಿಗೂ ಸ್ಫೂರ್ತಿದಾಯಕವಾಗಿದೆ. ಅವರ ಜೀವನದಿಂದ ನಾವು ಉತ್ತಮ ಮೌಲ್ಯಗಳನ್ನು ಕಲಿಯಬೇಕಿದೆ ಎಂದರು.
ಅವರು ರಚಿಸಿರುವ ರಾಮಾಯಣವು ಶ್ರದ್ಧೆ, ಆತ್ಮವಿಶ್ವಾಸ, ಧೈರ್ಯ ಹಾಗೂ ಉತ್ತಮ ನಡವಳಿಕೆಯ ಮಹತ್ವವನ್ನು ತಿಳಿಸುತ್ತದೆ. ಸಮಾಜದ ಒಳಿತಿಗಾಗಿ ನಮ್ಮಲ್ಲಿ ಬದಲಾವಣೆ ತಂದುಕೊಂಡು, ಸವಾಲುಗಳ ನಡುವೆಯೂ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂಬ ಮಹರ್ಷಿ ವಾಲ್ಮೀಕಿ ಅವರ ತತ್ವವನ್ನು ನಾವು ಅರಿಯಬೇಕು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರ ಜೀವನವನ್ನು ಸ್ಮರಿಸಿ, ಅವರ ಆದರ್ಶಗಳನ್ನು ಅಳವಡಿಸಿಕೊಳ್ಳಲು ಜಯಂತಿ ಉತ್ತಮ ಅವಕಾಶವಾಗಿದೆ. ಪ್ರತಿಯೊಬ್ಬರೂ ಉತ್ತಮ ಅಭ್ಯಾಸ ಮತ್ತು ನಡವಳಿಕೆಯನ್ನು ಬೆಳೆಸಿಕೊಳ್ಳಬೇಕು. ರತ್ನಾಕರರು ತಮ್ಮ ಜೀವನವನ್ನು ಪರಿವರ್ತಿಸಿಕೊಂಡು ಮಹರ್ಷಿ ವಾಲ್ಮೀಕಿಯಾದ ಪ್ರಸಂಗವು ನಮ್ಮೆಲ್ಲರಿಗೂ ಪ್ರೇರಣೆಯಾಗಬೇಕು. ಉತ್ತಮ ಗುಣಗಳನ್ನು ರೂಢಿಸಿಕೊಂಡು ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತಂದುಕೊಳ್ಳಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಸಿದ್ದರಾಮಣ್ಣ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರ ಜೀವನ, ಸಾಧನೆ ಹಾಗೂ ಸಾಹಿತ್ಯಿಕ ಕೊಡುಗೆಗಳ ಕುರಿತು ವಿವರಿಸಿದರು. ಅವರ ಜೀವನದ ಮಹತ್ವದ ಘಟನೆಗಳು ಮತ್ತು ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಈಶ್ವರಪ್ಪ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸಿದ್ಧಾರಾಜು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.