ನೂತನ ಜಿಲ್ಲಾಸ್ಪತ್ರೆ ನಿರ್ಮಾಣ ಕಾರ್ಯಕ್ಕೆ ಶೀಘ್ರದಲ್ಲೇ ಶಂಕುಸ್ಥಾಪನೆ – ಸಚಿವ ಡಾ: ಜಿ. ಪರಮೇಶ್ವರ

ತುಮಕೂರು : ನಗರದಲ್ಲಿರುವ 78 ವರ್ಷಗಳ ಹಳೆಯ ಜಿಲ್ಲಾಸ್ಪತ್ರೆ ಕಟ್ಟಡವನ್ನು ತೆರವುಗೊಳಿಸಿ, ಸುಮಾರು 131 ಕೋಟಿ ರೂ. ವೆಚ್ಚದಲ್ಲಿ 300 ಹಾಸಿಗೆಗಳ ನೂತನ ಜಿಲ್ಲಾ ಆಸ್ಪತ್ರೆ ನಿರ್ಮಾಣ ಕಾರ್ಯಕ್ಕೆ ಶೀಘ್ರದಲ್ಲೇ ಶಂಕುಸ್ಥಾಪನೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

 ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನೂತನ ಜಿಲ್ಲಾ ಆಸ್ಪತ್ರೆ ನಿರ್ಮಾಣ ಕುರಿತು ಸಭೆ ನಡೆಸಿ ಮಾತನಾಡಿದ ಅವರು,  ಹೊಸ ಜಿಲ್ಲಾ ಆಸ್ಪತ್ರೆ ನಿರ್ಮಾಣದ ವಿವರವಾದ ಯೋಜನಾ ವರದಿ (ಆPಖ) ತಯಾರಿಕೆ, ವಾಸ್ತುಶಿಲ್ಪ, ರಚನಾತ್ಮಕ ವಿನ್ಯಾಸ ಹಾಗೂ ಇತರ ತಾಂತ್ರಿಕ ರೇಖಾಚಿತ್ರಗಳ ಸಿದ್ಧತೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು. ಈ ಪ್ರಕ್ರಿಯೆ ಶೀಘ್ರ ಪೂರ್ಣಗೊಂಡು ಶಂಕುಸ್ಥಾಪನೆಗೆ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಹೇಳಿದರು.

ಜಿಲ್ಲಾಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗಿರುವ 100 ಹಾಸಿಗೆಗಳ ತುರ್ತು ನಿಗಾ ಘಟಕ ಆಸ್ಪತ್ರೆ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನೂ ಅಂದೇ ನೆರವೇರಿಸಲು ವ್ಯವಸ್ಥೆ ಕೈಗೊಳ್ಳುವಂತೆ ಸಚಿವರು ಸೂಚಿಸಿದರು. 

ಅಲ್ಲದೆ, ನರ್ಸಿಂಗ್ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ಹಾಗೂ ದಿಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಇತರೆ ಆರೋಗ್ಯ ಕೇಂದ್ರಗಳ ಕಟ್ಟಡ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನೂ ಒಂದೇ ದಿನ ನೆರವೇರಿಸಲು ಅನುವಾಗುವಂತೆ ಕಾರ್ಯ ಯೋಜನೆ ರೂಪಿಸಬೇಕು.  ಈ ಎಲ್ಲಾ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲು ಮಾನ್ಯ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗುವುದು ಎಂದು ಸಚಿವರು ಸಭೆಯಲ್ಲಿ ತಿಳಿಸಿದರು. 

ಸಭೆಯಲ್ಲಿ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ, ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಮಹಾನಗರ ಪಾಲಿಕೆ ಆಯುಕ್ತ ಅಶ್ವಿಜ ಬಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದ್ರಶೇಖರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ|| ಅಸ್ಗರ್ ಬೇಗ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *